Bengaluru 2nd Airport: ಸ್ಥಳ ಪರಿಶೀಲನೆ.. ಶೀಘ್ರ ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕಾಗಿ ಅಂತಿಮ ಜಾಗದ ಘೋಷಣೆ?
ಬೆಂಗಳೂರು ಐಟಿ ಹಬ್ ಆಗಿದ್ದು, ಕ್ಷಿಪ್ರಗತಿಯಲ್ಲಿ ಬೆಳವಣಿಗೆಯಾಗುತ್ತಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ಮೂಲಕ ಓಡಾಟ ನಡೆಸುತ್ತಿರುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ರಾಜ್ಯ ಸರ್ಕಾರ ಬೆಂಗಳೂರಿನ ನಿವಾಸಿಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲು ಮುಂದಾಗಿದೆ. ನೂತನ ವಿಮಾನ ನಿಲ್ದಾಣಕ್ಕಾಗಿ ಮೂರು ಸ್ಥಳಗಳನ್ನು ಆಯ್ಕೆ ಮಾಡಿತ್ತು. ಈ ಸಂಬಂಧ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೂ (ಎಎಐ) ಪ್ರಸ್ತಾವನೆಯನ್ನು ಸಲ್ಲಿಸಿತ್ತು.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಬೆಂಗಳೂರಿನ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (Bengaluru 2nd Airport) ನಿರ್ಮಾಣಕ್ಕಾಗಿ ಆಯ್ಕೆ ಮಾಡಲಾದ ಎರಡು ಜಾಗಗಳನ್ನು ಮಂಗಳವಾರ ಪರಿಶೀಲಿಸಿದರು. ಈ ಸ್ಥಳಗಳು ದಕ್ಷಿಣ ಬೆಂಗಳೂರಿನ ಕನಕಪುರ ರಸ್ತೆಯಲ್ಲಿದ್ದು, ಬಹುತೇಕ ಕೃಷಿ ಹಾಗೂ ಬಂಜರು ಭೂಮಿಗಳಾಗಿವೆ.

ಪ್ರಮುಖವಾಗಿ ಕೆ.ಚೂಡಹಳ್ಳಿ, ಕರೇನಹಳ್ಳಿ, ವೀರಸಂದ್ರ ಹಾಗೂ ಸದನಪಾಳ್ಯಕ್ಕೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು. ಈ ಗ್ರಾಮಗಳು ನೈಸ್ ರಸ್ತೆಯಿಂದ ಸರಿ ಸುಮಾರು 10 ಕಿಲೋಮೀಟರ್ ದೂರದಲ್ಲಿದ್ದು, ರಾಷ್ಟ್ರೀಯ ಹೆದ್ದಾರಿ 948ಕ್ಕೆ ಹೊಂದಿಕೊಂಡಿವೆ. ಈ ತಂಡವು ಇಂದು ನೆಲಮಂಗಲ-ಕುಣಿಗಲ್ ರಸ್ತೆಯಲ್ಲಿರುವ 3ನೇ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ.
ಈ ಬಗ್ಗೆ ಮಂಗಳವಾರ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಮಾಡಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (M.B.Patil) ಅವರು, 'ಬೆಂಗಳೂರು ನಗರದ ಉದ್ದೇಶಿತ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರವು ಗುರುತಿಸಿರುವ 3 ಸ್ಥಳಗಳ ಪೈಕಿ, ಕನಕಪುರ ರಸ್ತೆಯಲ್ಲಿರುವ ಎರಡು ಜಾಗದ ಪರಿಶೀಲನೆಯನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳ ತಂಡವು ನಡೆಸಿತು. ನಂತರ ತಂಡದ ಸದಸ್ಯರು ನನ್ನನ್ನು ಭೇಟಿಯಾಗಿ ವಿಚಾರ ವಿನಿಮಯ ನಡೆಸಿದರು' ಎಂದು ಹೇಳಿದ್ದಾರೆ.
ಮುಂದುವರಿದು, 'ಇದೇ ಸಂದರ್ಭದಲ್ಲಿ ಉದ್ದೇಶಿತ ವಿಮಾನ ನಿಲ್ದಾಣದ ಅಗತ್ಯವನ್ನು ತಂಡದ ಸದಸ್ಯರಿಗೆ ವಿವರಿಸಿ, ಪ್ರಾತ್ಯಕ್ಷಿಕೆ ಪ್ರದರ್ಶಿಸಿ, ಪಾರದರ್ಶಕವಾಗಿ ಸ್ಥಳ ಗುರುತಿಸುವ ಕೆಲಸ ಆಗಲಿ ಎಂದು ಸಲಹೆ ನೀಡಿದೆ. ತಂಡವು ನಾಳೆ (ಬುಧವಾರ) ನೆಲಮಂಗಲ-ಕುಣಿಗಲ್ ರಸ್ತೆಯ ಸ್ಥಳ ಪರಿಶೀಲನೆ ನಡೆಸಲಿದೆ. ಆ ಬಳಿಕ ಪ್ರಾಧಿಕಾರದ ಅಭಿಪ್ರಾಯ ತಿಳಿದುಕೊಂಡು, ಮುಂದಿನ ಕ್ರಮ ಕೈಗೊಳ್ಳಲಾಗುವುದು' ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿ & ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಮೇಲ್ದರ್ಜೆರಿಸಲು ಕೇಂದ್ರಕ್ಕೆ ಪತ್ರ..
ಉತ್ತರ ಕರ್ನಾಟಕ ಭಾಗದ ಜನರಿಗೆ ಶೀಘ್ರದಲ್ಲಿಯೇ ಭರ್ಜರಿ ಸಿಹಿಸುದ್ದಿಯೊಂದು ದೊರೆಯುವ ನಿರೀಕ್ಷೆಯಿದೆ. 'ಹುಬ್ಬಳ್ಳಿ (Hubballi) ಹಾಗೂ ಬೆಳಗಾವಿ (Belagavi) ವಿಮಾನ ನಿಲ್ದಾಣಗಳನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಮೇಲ್ದರ್ಜೆರಿಸುವ ಅಗತ್ಯವಿದೆ' ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
'ಹುಬ್ಬಳ್ಳಿ ಮತ್ತು ಬೆಳಗಾವಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಲು ಸೂಕ್ತವಾಗಿವೆ. ಪ್ರಯಾಣಿಕರ ದಟ್ಟಣೆಯೂ ಸಾಕಷ್ಟಿದೆ. ಸದ್ಯ, ವಿದೇಶಕ್ಕೆ ಹೋಗುವ ಈ ಭಾಗದ ಜನರು ಸಮೀಪದ ಗೋವಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬಳಕೆ ಮಾಡಬೇಕಾಗಿದೆ. ಅದರ ಬದಲಾಗಿ, ಈ ವಿಮಾನ ನಿಲ್ದಾಣಗಳನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳೆಂದು ಘೋಷಣೆ ಮಾಡಬೇಕು' ಎಂದು ಸಚಿವರು ಒತ್ತಾಯಿಸಿದ್ದಾರೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








