Bengaluru - Tumakuru Metro: ಬೆಂಗಳೂರು - ತುಮಕೂರು ನಡುವೆ ಶೀಘ್ರ ಮೆಟ್ರೋ.. ಇನ್ನೂ ಬೇಗ ತೆರಳಬಹುದು!
ಬೆಂಗಳೂರಿಗೆ ಪರ್ಯಾಯವಾಗಿ ತುಮಕೂರು ನಗರವನ್ನು ಅಭಿವೃದ್ಧಿಗೊಳಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದೆ. ಬೆಂಗಳೂರು - ತುಮಕೂರು (Bengaluru - Tumakuru) ನಡುವೆ ಮೆಟ್ರೋ (Metro) ಮಾರ್ಗ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿಸಿದಂತೆ ಕಾಣುತ್ತಿದೆ. ಇದು ನಮ್ಮ ಮೆಟ್ರೋದ ವಿಸ್ತರಣೆಯ ಭಾಗವಾಗಿರಲಿದೆ.
ಗಣರಾಜ್ಯೋತ್ಸವದ ಪ್ರಯುಕ್ತ ಶುಕ್ರವಾರ ತುಮಕೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ (G.Parameshwara), ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು. ಬೆಂಗಳೂರಿನ ಮೇಲೆ ಹೆಚ್ಚುತ್ತಿರುವ ಒತ್ತಡವನ್ನು ಕಡಿಮೆಗೊಳಿಸಲು ತುಮಕೂರಿನವರೆಗೆ ಮೆಟ್ರೋ (Tumakuru Metro) ಮಾರ್ಗ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು - ತುಮಕೂರು ನಡುವೆ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ (Detailed Project Report - DPR) ತಯಾರಿಸಲಾಗುತ್ತಿದೆ. ಈ ಯೋಜನೆಗೆ ಸರ್ಕಾರಗಳು ಅನುದಾನ ನೀಡುವ ಅಗತ್ಯವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನುಮೋದನೆ ನೀಡಿದರೆ ಸಾಕು. ಈಗಾಗಲೇ ಹಲವು ಖಾಸಗಿ ಕಂಪನಿಗಳು ಬಂಡವಾಳ ಹೂಡಿಕೆ ಮಾಡಲು ಆಸಕ್ತಿ ತೋರಿಸಿದ್ದು, ಖಾಸಗಿ, ಸಾರ್ವಜನಿಕ ಸಹಭಾಗತ್ವದಲ್ಲಿ (ಪಿಪಿಪಿ) ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಡಿಪಿಅರ್ ಸಿದ್ದಗೊಂಡ ನಂತರ, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ (Nitin Gadkari) ಅವರನ್ನು ಭೇಟಿಯಾಗಿ ಬೆಂಗಳೂರು - ತುಮಕೂರು ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಮನವಿ ಮಾಡಲಾಗುವುದು. ಇದೇ 29ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಆಗಮಿಸಲಿದ್ದು, ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ ಸೇರಿದಂತೆ 8 ತಿಂಗಳಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಹೇಳಿದ್ದಾರೆ.

ತುಮಕೂರಿಗೆ ಸ್ಮಾರ್ಟ್ ಸಿಟಿಯನ್ನು ಪೂರ್ಣಗೊಳಿಸಲಾಗುವುದು. ನಗರದ 6 ವಾರ್ಡ್‌ಗಳು ಮಾತ್ರ ಅಭಿವೃದ್ದಿಗೊಂಡಿವೆ. ಇನ್ನೂ 29 ವಾರ್ಡ್‌ಗಳು ಬಾಕಿ ಉಳಿದ್ದು, ಇವುಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬೇಕಿದೆ. ಮುಖ್ಯಮಂತ್ರಿಗಳಿಗೆ ರೂ.500 ಕೋಟಿ ಅನುದಾನ ನೀಡಬೇಕೆಂದು ಮನವಿ ಮಾಡುತ್ತೇನೆ. ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಸುಮಾರು ರೂ.450 ಕೋಟಿ ಮೊತ್ತದ ಕಾಮಗಾರಿಯನ್ನು ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡವನ್ನು ಕಡಿಮೆಗೊಳಿಸಲು ತುಮಕೂರು ಸಮೀಪ ಮತ್ತೊಂದು ಏರ್‌ಪೋರ್ಟ್ ಸ್ಥಾಪಿಸಲು ರಾಜ್ಯ ಸರ್ಕಾರ ಸಿದ್ಧತೆಯಲ್ಲಿ ತೊಡಗಿದೆ ಎಂದು ಈ ಹಿಂದೆ ವರದಿಯಾಗಿತ್ತು. ಕರ್ನಾಟಕದಲ್ಲಿ ಮತ್ತೊಂದು ಅಂತರರಾಷ್ಟ್ರಿಯ ವಿಮಾನ ನಿಲ್ದಾಣಕ್ಕೆ ತುಮಕೂರು, ಮಧುಗಿರಿ, ಕೊರಟಗೆರೆ ಹಾಗೂ ಶಿರಾ ನಡುವೆ 8000 ಎಕರೆ ಜಮೀನು ಗುರುತಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದ್ದರು.

ಕೆಐಎಡಿಬಿಗೂ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಂದಿನ ದಿನಗಳಲ್ಲಿ ಕೆಐಎಡಿಬಿ ತೀರ್ಮಾನ ತೆಗೆದುಕೊಳ್ಳಲಿದೆ. ದೇಶದ ಮೆಟ್ರೊಪಾಲಿಟನ್ ಸಿಟಿಗಳಲ್ಲಿ 2 ವಿಮಾನ ನಿಲ್ದಾಣಗಳಿವೆ. ಆದರೆ, ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ರನ್ ವೇ ಇದ್ದರೂ ವಾರ್ಷಿಕ 1 ಕೋಟಿಗೂ ಹೆಚ್ಚಿನ ಜನರು ಪ್ರಯಾಣಿಸುತ್ತಿದ್ದು, ಹೆಚ್ವಿನ ಒತ್ತಡವಿದೆ. ಅದನ್ನು ಕಡಿಮೆಗೊಳಿಸಲು ಎರಡನೇ ವಿಮಾನ ನಿಲ್ದಾಣದ ಅಗತ್ಯವಿದೆ' ಎಂದು ಜಿ.ಪರಮೇಶ್ವರ್ ಹೇಳಿದ್ದರು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications