Bengaluru Tunnel Road: ಬೆಂಗಳೂರಿನಲ್ಲಿ 2 ಕಿ.ಮೀ ಪ್ರಾಯೋಗಿಕ ಸುರಂಗ ರಸ್ತೆ ನಿರ್ಮಾಣಕ್ಕೆ ತಯಾರಿ.. ಇಲ್ಲಿದೆ ಮಾಹಿತಿ
ಬೆಂಗಳೂರು (Bengaluru) ನಗರದಲ್ಲಿ ಅಧಿಕಗೊಳ್ಳುತ್ತಿರುವ ಸಂಚಾರ ದಟ್ಟಣೆ ಕಡಿಮೆಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಅದಕ್ಕಾಗಿ ಸುರಂಗ ರಸ್ತೆ (Tunnel Road) ನಿರ್ಮಿಸುವ ಬಗ್ಗೆ ಕೆಲವೇ ತಿಂಗಳ ಹಿಂದೆ ಪ್ರಸ್ತಾಪಿಸಿತ್ತು. ಈಗ ಯೋಜನೆಗೆ ಮರುಜೀವ ಬಂದಿದೆ. ಆ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.
ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ 2 ಕಿ.ಮೀ ಸುರಂಗ ರಸ್ತೆ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ (Detailed Project Report - DPR) ಸಿದ್ಧಪಡಿಸಲಾಗುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಶುಕ್ರವಾರ ಹೇಳಿದ್ದಾರೆ. ಫೀಲ್ಡ್ ಮಾರ್ಷಲ್ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ನಡೆದ 75 ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದ್ದರು.

ಅಂತರರಾಷ್ಟ್ರೀಯ ಸಂಸ್ಥೆಯೊಂದಿಗೆ ಸಮಾಲೋಚನೆ ನಡೆಸಿ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದ್ದಾರೆ. ಈ ಪ್ರಾಯೋಗಿಕ ಯೋಜನೆಯಲ್ಲಿ ಎಲ್ಲಿ ಅನುಷ್ಠಾನಗೊಳಿಸಲಾಗುತ್ತದೆ ಎಂಬುದರ ಕುರಿತು ಸದ್ಯ ಹೆಚ್ಚಿನ ವಿವರಗಳು ಲಭ್ಯವಿಲ್ಲ. ರಾಜ್ಯ ಸರ್ಕಾರ, ವಾಹನ ಸವಾರರಿಗೆ ಟ್ರಾಫಿಕ್ ಕಿರಿ-ಕಿರಿಯನ್ನು ತಪ್ಪಿಸಲು ನಗರದಾದ್ಯಂತ 190 ಕಿ.ಮೀ ಉದ್ದದ ಸುರಂಗ ರಸ್ತೆ ನಿರ್ಮಿಸಲು ಯೋಜಿಸಿದೆ ಎಂದು ಈ ಹಿಂದೆ ವರದಿಯಾಗಿತ್ತು.
ಮೂಲಗಳ ಪ್ರಕಾರ, ನಗರ ಹೆಬ್ಬಾಳದಿಂದ ಮೇಖ್ರಿ ಸರ್ಕಲ್ ವರೆಗೆ 4 ಪಥ (ಲೈನ್)ದ ಸುರಂಗ ರಸ್ತೆ ನಿರ್ಮಾಣಗೊಳ್ಳುವ ಸಾಧ್ಯತೆಯಿದೆ. ಈ ರಸ್ತೆಯನ್ನು ಭೂಮಿಯ ಕೆಳಭಾಗದಲ್ಲಿ ನಿರ್ಮಾಣಗೊಳಿಸುತ್ತಿರವುದರಿಂದ ಯಾವುದೇ ರೀತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಅಗತ್ಯವಿಲ್ಲ. 1 ಕಿಲೋಮಿಟರ್ ಸುರಂಗ ಕೊರೆಯಲು ಕನಿಷ್ಠವೆಂದರೂ ರೂ.500 ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ.

ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಈ ಬಗ್ಗೆ ಮಾತನಾಡಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಬೃಹತ್ ಯೋಜನೆಗೆ 45 ದಿನಗಳಲ್ಲಿ ಟೆಂಡರ್ ಆಹ್ವಾನಿಸಲಾಗುವುದು. ಸುರಂಗ ರಸ್ತೆ ಯೋಜನೆಗೆ ಆಸಕ್ತಿ ತೋರಿದ 9 ಕಂಪನಿಗಳಲ್ಲಿ 8 ಕಂಪನಿಗಳನ್ನು ಆಯ್ಕೆ ಮಾಡಲಾಗಿದೆ. ಆದಷ್ಟು ಬೇಗ ಕಾರ್ಯಸಾಧ್ಯತಾ ವರದಿ ನೀಡುವಂತೆ ತಿಳಿಸಲಾಗಿದೆ ಎಂದು ಹೇಳಿದ್ದರು.
ಈ ಕಂಪನಿಗಳು, ಸುರಂಗ ರಸ್ತೆ ಹೇಗಿರಬೇಕು. ಅದು 4 ಅಥವಾ 6 ಪಥಗಳನ್ನು ಒಳಗೊಂಡಿರಬೇಕೇ, ಎಲ್ಲಿಂದ ಆರಂಭಿಸಿ, ಎಲ್ಲಿ ಕೊನೆಗೊಳಿಸಬೇಕು ಎಂಬುದರ ಬಗ್ಗೆ ಅಧ್ಯಯನ ನಡೆಸಲಿವೆ. ಈ ಯೋಜನೆಯು ಬೃಹತ್ ಗಾತ್ರದಾಗಿದೆ. ದೊಡ್ಡ ಪ್ರಮಾಣದ ಹಣಕಾಸಿನ ಅಗತ್ಯವಿದ್ದು, ವಿವಿಧ ಹಂತದಲ್ಲಿ ಕಾಮಗಾರಿಯನ್ನು ನಡೆಸಬೇಕಾಗಿದೆ ಎಂದು ಡಿ.ಕೆ.ಶಿವಕುಮಾರ್ ಅವರು ಮಾಹಿತಿ ನೀಡಿದ್ದರು.
ಸುರಂಗ ರಸ್ತೆಯನ್ನು ಈ ಮಾರ್ಗದಲ್ಲಿ ನಿರ್ಮಿಸಬೇಕೆಂದು ರಾಜ್ಯ ಸರ್ಕಾರ ಕೆಲವೊಂದು ಪ್ರದೇಶಗಳನ್ನು ಗುರುತಿಸಿದೆ. ಅದರಲ್ಲಿ ಬಳ್ಳಾರಿ ರಸ್ತೆ, ಹಳೆ ಮದ್ರಾಸ್ ರಸ್ತೆ, ಎಸ್ಟೀಮ್ ಮಾಲ್ ಜಂಕ್ಷನ್ ನಿಂದ ಮೇಖ್ರಿ ಸರ್ಕಲ್, ಮಿಲ್ಲರ್ ಸರ್ಕಲ್, ಚಾಲುಕ್ಯ ಸರ್ಕಲ್, ಟ್ರಿನಿಟಿ ಸರ್ಕಲ್, ಸರ್ಜಾಪುರ ರಸ್ತೆ, ಹೊಸೂರು ರಸ್ತೆ, ಮಾಗಡಿ ರಸ್ತೆ, ತುಮಕೂರು ರಸ್ತೆಯಿಂದ ಯಶವಂತಪುರ ಜಂಕ್ಷನ್, ಹೊರ ವರ್ತುಲ ರಸ್ತೆ, ಗೊರಗುಂಟೆಪಾಳ್ಯ ಸೇರಿದೆ.
ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ 2 ಕಿ.ಮೀ ಸುರಂಗ ರಸ್ತೆ (Pilot tunnel road) ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿಯನ್ನು ತಯಾರಿಸುತ್ತಿರವುದರಿಂದ ಕೆಲವೇ ದಿನಗಳಲ್ಲಿ ಈ ಕಾಮಗಾರಿ ಆರಂಭವಾಗುವ ನೀರಿಕ್ಷೆಯಿದೆ. ಈ ಯೋಜನೆ ಪರಿಪೂರ್ಣವಾಗಿ ಯಶಸ್ವಿಯಾದರೆ, ರಾಜ್ಯ ಸರ್ಕಾರ ನಗರದಾದ್ಯಂತ 190 ಕಿ.ಮೀ ಸುರಂಗ ರಸ್ತೆ ನಿರ್ಮಾಣಕ್ಕೆ ಮುಂದಾಗಬಹುದು ಎಂದು ಹೇಳಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications