Karnataka: ದೊಡ್ಡಮಟ್ಟದಲ್ಲಿ ಹೆದ್ದಾರಿಗಳ ಅಭಿವೃದ್ಧಿ.. ಶಿವಮೊಗ್ಗ-ತುಮಕೂರು ರಸ್ತೆ ಜನವರಿ 2025ರೊಳಗೆ ಪೂರ್ಣ
ದೇಶದ ಪ್ರಗತಿಗೆ ಮೂಲಸೌಕರ್ಯ ಅಭಿವೃದ್ದಿ ಪ್ರಮುಖ ಪಾತ್ರವಾಗಿಸುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಕಾರದಿಂದ ಕರ್ನಾಟಕ (Karnataka)ದಲ್ಲಿ ಹಲವು ಹೆದ್ದಾರಿಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಆರ್ಥಿಕತೆಗೆ ಉತ್ತೇಜನ ನೀಡುವ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಈ ವರ್ಷದೊಳಗೆ ಲೋಕಾರ್ಪಣೆಗೊಳ್ಳಲಿದ್ದು, ತುಮಕೂರು-ಶಿವಮೊಗ್ಗ ಚತುಷ್ಪಥ ರಸ್ತೆ ಜನವರಿ 2025ರೊಳಗೆ ಪೂರ್ಣಗೊಳ್ಳಲಿದೆ.
ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಗುರುವಾರ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ ಹಾಗೂ ಭೂ ಸಾರಿಗೆ ಸಚಿವಾಲಯ ಜಂಟಿಯಾಗಿ ಆಯೋಜಿಸಿದ್ದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ (Central Minister Nitin Gadkari) ಅವರು ಮಾತನಾಡಿದರು.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ (Bengaluru-Chennai Expressway) ಕಾಮಗಾರಿಯು ಡಿಸೆಂಬರ್ 2024ರೊಳಗೆ ಮುಕ್ತಾಯಗೊಳ್ಳುವ ಸಾಧ್ಯತೆಯಿದೆ. ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆಗೊಂಡ ಬಳಿಕ ಇವೆರೆಡು ನಗರಗಳ ನಡುವಿನ ಪ್ರಯಾಣದ ಅವಧಿಯು 2 ಗಂಟೆಗಳಿಗೆ ಇಳಿಕೆಯಾಗಲಿದೆ. ಪ್ರಮುಖ ಐಟಿ ಹಬ್‌ಗಳು ಸಂಪರ್ಕಗೊಳ್ಳುವುದರಿಂದ ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಯಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದರು.
ಕರ್ನಾಟಕದಲ್ಲಿ ರೂ.3 ಲಕ್ಷ ಕೋಟಿ ವೆಚ್ಚದ ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿವೆ. ರೂ.1.5 ಲಕ್ಷ ಕೋಟಿ ಮೊತ್ತದ ಹೊಸ ಯೋಜನೆಗಳು ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂದು ಹೇಳಿದರು. ಸಮಾರಂಭದಲ್ಲಿ ಹಾಜರಿದ್ದ ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಭೂಸ್ವಾಧೀನ ಸೇರಿದಂತೆ ಕಾಮಗಾರಿಗೆ ಇರುವ ಅಡೆತಡೆಗಳನ್ನು ನಿವಾರಿಸಿ, ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಮನವಿ ಮಾಡಿದರು.

ರಾಷ್ಟ್ರೀಯ ಹೆದ್ದಾರಿ 206ರ ಶಿವಮೊಗ್ಗ-ತುಮಕೂರು (Shivamogga-Tumakuru) ವಿಸ್ತರಣಾ ಚತುಷ್ಪಥ ರಸ್ತೆ ಕಾಮಗಾರಿ ಜನವರಿ 2025ರೊಳಗೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದರು. ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳನ್ನು ಸಂಪರ್ಕಿಸುವ ಆಗುಂಬೆ ಘಾಟ್ ರಸ್ತೆಯಲ್ಲಿ ಸುರಂಗ (Tunnel) ನಿರ್ಮಾಣ ಸಂಬಂಧ ಕಾರ್ಯಸಾಧ್ಯತಾ ವರದಿಯನ್ನು ಸಲ್ಲಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ನಿತಿನ್ ಗಡ್ಕರಿ ಅವರು ಸೂಚಿಸಿದರು.
ಮೈಸೂರು-ವಯನಾಡು (Mysuru-Wayanad) ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್) 212ರ ಬಗ್ಗೆಯು ಮಾತನಾಡಿದ ಅವರು, ಬಂಡೀಪುರ ರಾಷ್ಟ್ರೀಯ ಉದ್ಯಾನವನವಿರುವುದರಿಂದ ಕಾಡು ಪ್ರಾಣಿಗಳ ರಕ್ಷಣೆಗಾಗಿ ರಾತ್ರಿ 9 ರಿಂದ ಬೆಳಗ್ಗೆ 6 ರವರೆಗೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಹೀಗಾಗಿ, ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ರೂ.2,500 ಕೋಟಿ ವೆಚ್ಚದಲ್ಲಿ ಮೈಸೂರು-ಮಲಪ್ಪುರಂ ಸಂಪರ್ಕಿಸುವ ಪರ್ಯಾಯ ರಸ್ತೆಯನ್ನು ಅಭಿವೃದ್ಧಿಪಡೆಯಿಸಲಾಗುವುದು ಎಂದು ಹೇಳಿದರು.
ಕರ್ನಾಟಕದಲ್ಲಿ 17 ರೋಪ್‌ವೇಗಳನ್ನು ನಿರ್ಮಾಣ ಮಾಡಲು ಯೋಜಿಸಲಾಗಿದೆ. ಉಡುಪಿಯ ಕೊಲ್ಲೂರು, ಶಿವಮೊಗ್ಗದ ಕೊಡಚಾದ್ರಿ ಮಧ್ಯೆ ಹಾಗೂ ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ರೋಪ್ ವೇಯನ್ನು ಮಂಜೂರು ಮಾಡಲಾಗಿದೆ ಎಂದು ನಿತಿನ್ ಗಡ್ಕರಿ ಹೇಳಿದರು. ಪೆಟ್ರೋಲ್ ಮತ್ತು ಡೀಸೆಲ್‌ಗೆ ಹೋಲಿಸಿದರೆ ಎಥೆನಾಲ್ ಬೆಲೆ ಕಡಿಮೆಯಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಎಥೆನಾಲ್ ತಯಾರಿಕೆಗೆ ಅವಕಾಶವಿದೆ. ಸಕ್ಕರೆ ಕಾರ್ಖಾನೆಗಳು ಇದನ್ನು ಉತ್ಪಾದಿಸಬಹುದು. ರಾಜ್ಯ ಸರ್ಕಾರವು ಎಥೆನಾಲ್ ತಯಾರಿಕೆಗೆ ಉತ್ತೇಜನ ನೀಡಬೇಕು ಎಂದು ತಿಳಿಸಿದರು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications